“ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಕೆಕೆಆರ್‌ಟಿಸಿ) ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನೌಕರರು ಮಂಗಳವಾರ ಆರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಹೈಕೋರ್ಟ್ ಮುಷ್ಕರ ನಡೆಸಬಾರದೆಂದು ಆದೇಶ ನೀಡಿದ್ದರೂ, ನೀವು ಅದನ್ನು ಪಾಲಿಸಿಲ್ಲ.
ಎಸ್ಮಾ ಜಾರಿಯಾಗಿದ್ದರೂ ಮುಷ್ಕರ ನಡೆಸುವುದು ಕಾನೂನು ಬಾಹಿರ. ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ.
ಅಲ್ಲದೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡದೇ ಇದ್ದರೇ, ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿತ್ತು. ಈ ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.
ಹೈಕೋರ್ಟ್ ಆದೇಶದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಜೆಎಸಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಅವರು, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ. ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ . ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದರು.
Leave a comment