“ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟದಿಂದ ವಿನಾಶಕಾರಿ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 38 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, ಯಾತ್ರಾರ್ಥಿಗಳ ದಟ್ಟಣೆ ಮತ್ತು ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಮೇಘಸ್ಫೋಟ ಸಂಭವಿಸಿದಾಗ ದುರಂತ ನಡೆದ ಸ್ಥಳದಲ್ಲಿ 250ಕ್ಕೂ ಹೆಚ್ಚು ಜನರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಸ್ಥಳದಲ್ಲಿ ರಕ್ಷಣಾ ತಂಡಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿವೆ.
ಇಲ್ಲಿಯವರೆಗೆ, 100 ರಿಂದ 150 ಜನರು ಗಾಯಗೊಂಡಿದ್ದಾರೆ ಮತ್ತು ಸಿಲುಕಿಕೊಂಡಿರುವವರನ್ನು ಸ್ಥಳಾಂತರಿಸಲು ಮತ್ತು ವೈದ್ಯಕೀಯ ನೆರವು ನೀಡಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ’ ಎಂದು ಕಿಶ್ತ್ವಾರ್ ಡಿಡಿಸಿ ಅಧ್ಯಕ್ಷೆ ಪೂಜಾ ಠಾಕೂರ್ ಟಿಎನ್‌ಐಇಗೆ ತಿಳಿಸಿದ್ದಾರೆ.
ವಾಹನ ನಿಲುಗಡೆ ಸ್ಥಳ, ಲಂಗರ್ (ಸಮುದಾಯ ಅಡುಗೆಮನೆ) ಮತ್ತು ಸಿಆರ್‌ಪಿಎಫ್ ಶಿಬಿರದ ಮೇಲೆ ಹಠಾತ್ ಪ್ರವಾಹವು ನುಗ್ಗಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ,
ಆದರೆ ಕೆಟ್ಟ ಹವಾಮಾನ ಮತ್ತು ಹಾನಿಗೊಳಗಾದ ರಸ್ತೆಗಳು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಯ ನಂತರ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಈಗ ಪರಿಸ್ಥಿತಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ.
ದೊಡ್ಡ ಪ್ರಮಾಣದ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಕೈಗೊಳ್ಳಲು ತಂಡಗಳು ಮತ್ತು ಸಂಪನ್ಮೂಲಗಳನ್ನು ಸ್ಥಳಕ್ಕೆ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೈಜೋಡಿಸಿದೆ. ಜನರನ್ನು ರಕ್ಷಿಸಲು ಮತ್ತು ಬದುಕುಳಿದವರಿಗೆ ಸಹಾಯ ಮಾಡಲು ವೈಟ್ ನೈಟ್ ರಚನೆಯ ಪಡೆಗಳನ್ನು ತ್ವರಿತವಾಗಿ ಸಜ್ಜುಗೊಳಿಸಲಾಗಿದೆ ಎಂದು ಜಮ್ಮು ಮೂಲದ ಸೇನಾ ವಕ್ತಾರರು ತಿಳಿಸಿದ್ದಾರೆ.
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ ಮತ್ತು ಪ್ರವಾಹದಿಂದ ಪೀಡಿತರಾದ ಎಲ್ಲರೊಂದಿಗೆ ನನ್ನ ಆಲೋಚನೆ ಮತ್ತು ಪ್ರಾರ್ಥನೆಗಳು ಇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ. “
ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು” ಎಂದು ಪ್ರಧಾನಿ ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ. “
ಕಿಶ್ತ್ವಾರ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಕುರಿತು ಲೆಫ್ಟಿನೆಂಟ್ ಗವರ್ನರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಎನ್‌ಡಿಆರ್‌ಎಫ್ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಗಿದೆ.
ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಪ್ರತಿಯೊಂದು ಪರಿಸ್ಥಿತಿಯಲ್ಲೂ ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಜನರಿಗೆ ಸಾಧ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದೇವೆ” ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Leave a comment