“ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಆಯಾ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತು ಸಂಬಂಧಿತ ಚಟುವಟಿಕೆಗಳು ಮುಂದುವರಿದರೆ ಇನ್ಸ್‌ಪೆಕ್ಟರ್‌ಗಳು, ಉಪ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ನೂತನ ಪೊಲೀಸ್ ಕ್ವಾರ್ಟರ್ಸ್ ಹಾಗೂ ಪೊಲೀಸ್ ಠಾಣೆ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಾದಕ ವಸ್ತು ಮಾರಾಟದ ವಿರುದ್ಧದ ಸಮರಕ್ಕೆ ಕರ್ನಾಟಕದ ಬದ್ಧತೆಯನ್ನು ಪುನರುಚ್ಚರಿಸಿದರು. ಕಳೆದ ವರ್ಷದಲ್ಲಿ ಬೆಂಗಳೂರಿನಲ್ಲಿ 250 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ನಾಶಪಡಿಸಲಾಗಿದೆ ಎಂದು ತಿಳಿಸಿದರು.
ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಹಲವಾರು ವಿದೇಶಿ ಪ್ರಜೆಗಳನ್ನು ಬಂಧಿಸಿ, ಗಡಿಪಾರು ಮಾಡಲಾಗಿದೆ ಮತ್ತು ಅನೇಕ ಪೆಡ್ಲರ್‌ಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕೆಲವು ಸಂದರ್ಭಗಳಲ್ಲಿ ಪೊಲೀಸರು ಗುಂಡು ಹಾರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಅಗತ್ಯವಿದ್ದರೆ ಪೊಲೀಸರು ಗುಂಡು ಹಾರಿಸುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ನಕ್ಸಲ್ ಬೆದರಿಕೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಮಾವೋವಾದಿಗಳು ಶರಣಾಗುವಂತೆ ಉತ್ತೇಜಿಸಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಇತ್ತೀಚಿಗೆ ಎನ್ ಕೌಂಟರ್ ನಲ್ಲಿ ಹತ್ಯೆಯಾದ ನಕ್ಸಲ್ ನಾಯಕ ವಿಕ್ರಮ್ ಗೌಡ ಸಹಚರರು ಸರ್ಕಾರದ ಪುನರ್ವಸತಿ ನೀತಿಯಡಿಯಲ್ಲಿ ಶರಣಾಗುವಂತೆ ಒತ್ತಾಯಿಸಿದರು.
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕಾನೂನು ಎಲ್ಲಾರಿಗೂ ಒಂದೇ ಎಂದು ಪುನರುಚ್ಚರಿಸಿದರು