ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಕರ್ನಾಟಕ

ಅಂಗೋಂಚ ಬಿಮೋಲ್ ಅಕೋಯಿಜಾಮ್: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರ ವಶ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ JNU ಪ್ರೊಫೆಸರ್ ಅಂಗೋಂಚ ಬಿಮೋಲ್ ಅಕೋಯಿಜಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಕೇಂದ್ರ ಕಚೇರಿ ಕಡೆಗೆ ಮೆರವಣಿಗೆ ಯತ್ನಿಸಿದ...

· ಬೆಂಗಳೂರು ನಗರ
ಕಾಂಗ್ರೆಸ್ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ, ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೊಲೀಸರ ವಶಕ್ಕೆ!
ಹಂಚಿಕೊಳ್ಳಿ:

ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಸಂಸದ ಹಾಗೂ ಮಾಜಿ JNU ಪ್ರೊಫೆಸರ್ ಅಂಗೋಂಚ ಬಿಮೋಲ್ ಅಕೋಯಿಜಾಮ್ ವಿರುದ್ಧ ಆಕ್ರೋಶ ಹೊರಹಾಕಿ, ಕೆಪಿಸಿಸಿ ಕಚೇರಿಯತ್ತ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಮಹಿಳಾ ಮೋರ್ಚಾದ ಹಲವು ಕಾರ್ಯಕರ್ತೆಯರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.

ಈ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್‌ನ ಹಿರಿಯ ನಾಯಕರು ಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ವಿಧಾನ ಪರಿಷತ್ ಸದಸ್ಯೆ (MLC) ಭಾರತಿ ಶೆಟ್ಟಿ ಸೇರಿದಂತೆ ಹಲವು ಮಹಿಳಾ ನಾಯಕಿಯರು ಈ ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು. ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬಂದಿದ್ದ ಪ್ರತಿಭಟನಾಕಾರರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಚೇರಿಯನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಮೆರವಣಿಗೆ ಸಾಗುತ್ತಿದ್ದ ದಾರಿಯಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸರು ಅವರನ್ನು ತಡೆದು, ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಡೆಹಿಡಿದರು. ಬಳಿಕ ಅವರನ್ನು ವಶಕ್ಕೆ ಪಡೆದು ಪೊಲೀಸ್ ಬಸ್‌ಗಳಲ್ಲಿ ಕರೆದೊಯ್ಯಲಾಯಿತು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತಿ ಶೆಟ್ಟಿ, ಮಣಿಪುರದ ಕಾಂಗ್ರೆಸ್ ಸಂಸದರು ಪ್ರಾಧ್ಯಾಪಕರಾಗಿದ್ದರೂ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾರೆ. 'ಗುರು' ಸ್ಥಾನದಲ್ಲಿದ್ದವರು ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುವ ಮೂಲಕ ಅತ್ಯಂತ ಕೀಳು ಮಟ್ಟದಲ್ಲಿ ವರ್ತಿಸಿದ್ದಾರೆ ಎಂದು ಆಪಾದಿಸಿದರು.

ಅಂಗೋಂಚ ಬಿಮೋಲ್ ಅಕೋಯಿಜಾಮ್ ಅವರ ಈ ಕೃತ್ಯದ ವಿರುದ್ಧ ಬಿಜೆಪಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು. ಕಾಂಗ್ರೆಸ್ ವರಿಷ್ಠರು ಆ ಸಂಸದರಿಗೆ ಬೆಂಬಲ ನೀಡುತ್ತಿದ್ದಾರೆ ಎಂದೂ ಅವರು ಆರೋಪಿಸಿದರು.

ಹಂಚಿಕೊಳ್ಳಿ: