ಮುಖ್ಯ ವಿಷಯಕ್ಕೆ ಹೋಗಿ
The Karnataka Today
13 Oct
ಸುದ್ದಿ
ಕರ್ನಾಟಕ

ಎಸ್‌ಐಆರ್: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್‌) ಪ್ರಕ್ರಿಯೆ ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ...

ಎಸ್‌ಐಆರ್: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಹುಲ್
ಹಂಚಿಕೊಳ್ಳಿ:

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ವಿರೋಧಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದಾರೆ.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ವಿರೋಧ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಈ ನಡುವೆಯೇ ಈ ಅರ್ಜಿ ಸಲ್ಲಿಕೆಯಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಸೋಮವಾರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ನಾಯಕರ ಜೊತೆಗೂಡಿ ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ಕೈಗೊಂಡಿದ್ದರು.

ಎಸ್‌ಐಆರ್ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಚರ್ಚಿಸಲು ಭೇಟಿಗೆ ಅವಕಾಶ ಕೋರಿ ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷಗಳ ನಾಯಕರು ಪತ್ರ ಬರೆದಿದ್ದರೂ, ಸಿಜೆಐ ಸೂರ್ಯಕಾಂತ್‌ ಅವರು ಭೇಟಿಗೆ ನಿರಾಕರಿಸಿದ ಮರುದಿನವೇ ಈ ಘಟನೆ ನಡೆದಿದೆ.

ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಆತಂಕ ವ್ಯಕ್ತಪಡಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮನವಿ ಸಲ್ಲಿಸಲು ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಜೆಐ ಅವರನ್ನು ಭೇಟಿಯಾಗಲು ಸಮಯ ಕೇಳಿದ್ದರು.

ಆದರೆ, ಚರ್ಚಿಸಲು ಉದ್ದೇಶಿಸಿರುವ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವ ಕಾರಣ ಸಿಜೆಐ ಅವರು ಈ ಭೇಟಿಯ ಮನವಿಯನ್ನು ತಿರಸ್ಕರಿಸಿದರು. ಇದಲ್ಲದೆ, ಸರ್ಕಾರದ ಆಡಳಿತಾತ್ಮಕ ಕೆಲಸಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದರು. ಜೊತೆಗೆ, ಸೂಕ್ತ ಪರಿಹಾರ ಪಡೆಯಲು ನ್ಯಾಯಾಂಗದ ಮೊರೆ ಹೋಗಲು ಎಲ್ಲರಿಗೂ ಅವಕಾಶವಿದೆ ಎಂದು ಸ್ಪಷ್ಟಪಡಿಸಿದ್ದರು.

ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳ ಕುರಿತು ಮಂಗಳವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. ವಿರೋಧ ಪಕ್ಷದ ನಾಯಕರು ಸಲ್ಲಿಸುವ ಯಾವುದೇ ಅರ್ಜಿಯನ್ನು ಬಾಕಿಯಿರುವ ವಿಷಯಗಳ ಜೊತೆಗೆ ಪರಿಗಣಿಸುವುದಾಗಿ ಸಿಜೆಐ ಸೂಚಿಸಿದ್ದರು.

ಹಂಚಿಕೊಳ್ಳಿ: