ಬೆಂಗಳೂರು: ಪ್ರತಿಭಟನೆಗೆ ಮುಂದಾದ ಸಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಬ್ರೇಕ್ ಹಾಕಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸಿಜೆಪಿ ಹೋರಾಟಕ್ಕಿಳಿದಿದೆ. ಆದರೆ ಬೆಂಗಳೂರಿನಲ್ಲಿ ಸಿಜೆಪಿ ಹೋರಾಟಗಾರರನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು (ಅ.10) ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ದೆಹಲಿ ಪ್ರತಿಭಟನೆಯು ವಿಫಲವಾಗಿದೆ. ದೆಹಲಿ ಪೊಲೀಸರಿಂದ ಅನುಮತಿ ಲಭ್ಯವಿಲ್ಲದಿದ್ದರೂ ಹೋರಾಟ ನಡೆಸಲು ಮುಂದಾದ ಸಿಜೆಪಿ ಕಾರ್ಯಕರ್ತರು ಹಾಗೂ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಭಿಜಿತ್ ದೀಪ್ಕೆ ಸೇರಿದಂತೆ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ, ಬೆಂಗಳೂರಿನಲ್ಲಿ ಸಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟುಮಾಡಲು ಯತ್ನಿಸಿದವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆ ತಡೆಗೆ ಮುಂದಾದ ಸಿಜೆಪಿ
ಬೆಂಗಳೂರಿನಲ್ಲಿ ಸಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಲು ಪ್ರಯತ್ನಿಸಿದ್ದಾರೆ. ಇದಕ್ಕೆ ಪೊಲೀಸರು ಅವಕಾಶ ಕಲ್ಪಿಸಿಲ್ಲ. ಇದರಿಂದಾಗಿ ಸಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಪರಿಸ್ಥಿತಿಯು ನಿಯಂತ್ರಣ ತಪ್ಪುತ್ತಿದ್ದಂತೆ ಸಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿಯ ರೀತಿಯಲ್ಲೇ ಸಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಏರಿ ಪ್ರತಿಭಟಿಸಲು ಪ್ರಯತ್ನಿಸಿದ್ದಾರೆ. ಸಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ಸಿದ್ಧತೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರು ರಸ್ತೆಗೆ ನುಗ್ಗಲು ಯತ್ನ ನಡೆಸಿದ್ದಾರೆ. ಈ ಕಾರಣದಿಂದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಆದರೆ ಸಿಜೆಪಿ ಹೋರಾಟಗಾರರು ಬ್ಯಾರಿಕೇಡ್ ಹತ್ತಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರೊಂದಿಗೆ ನೂಕಾಟ ತಳ್ಳಾಟ ಸಂಭವಿಸಿದೆ.
ದೀಪ್ಕೆ ಸೇರಿದಂತೆ ಸಿಜೆಪಿ ನಾಯಕರು ಅರೆಸ್ಟ್
ಅಭಿಜಿತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಶ್ ರಾಂಕ ಸೇರಿದಂತೆ ಸಿಜೆಪಿ ನಾಯಕರು ದೆಹಲಿ ಪ್ರತಿಭಟನೆಗಾಗಿ ಆಗಮಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಮಾನದಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ, ಪ್ರಯಾಣಿಕರು ಕೆಳಗಿಳಿಯುವ ಮುನ್ನವೇ ಪೊಲೀಸರು ವಿಮಾನದೊಳಕ್ಕೆ ಪ್ರವೇಶಿಸಿದ್ದಾರೆ. ನಂತರ ಅಭಿಜಿತ್ ದೀಪ್ಕೆ ಸೇರಿದಂತೆ ಸಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಇಂದಿರಾ ಗಾಂಧಿ ಎಮರ್ಜೆನ್ಸಿಗಿಂತ ಕಠೋರ ಎಂದ ದೀಪ್ಕೆ
ವಿಮಾನದಿಂದಲೇ ವಶಕ್ಕೆ ಪಡೆದ ಪೊಲೀಸರ ಕ್ರಮದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿ ಹೇರಿದ್ದ ಎಮರ್ಜೆನ್ಸಿಯಲ್ಲಿ ಇಷ್ಟೊಂದು ಕಠಿಣ ನಿರ್ಧಾರಗಳು ಇರಲಿಲ್ಲ. ತುರ್ತು ಪರಿಸ್ಥಿತಿಗಿಂತಲೂ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದೇ ವೇಳೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.




